Bengaluru
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೀಸಲಾತಿ; ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ.
ಬೆಂಗಳೂರು: ರಾಜ್ಯದ ಪ್ರತಿಭಾವಂತ ಯುವಕರಿಗೆ ನಮ್ಮ ಕರ್ನಾಟಕದಲ್ಲೇ ಕೆಲಸ ಸಿಗದ ಕಾಲ ಬಂದಿತ್ತು. ಆದರೆ ಈ ಸಮಸ್ಯೆಯನ್ನು ದೂರ ಮಾಡುವಲ್ಲಿ ನಮ್ಮ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಇನ್ನು ಮುಂದೆ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.
“ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ.” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಹಳ ವರ್ಷಗಳ ನಂತರ ರಾಜ್ಯ ಸರ್ಕಾರ ಕನ್ನಡದ ಯುವ ಜನತೆಯ ಅಹವಾಲನ್ನು ಕೇಳಿ ಸ್ಪಂದಿಸಿದೆ. ಸರ್ಕಾರದ ಈ ದಿಟ್ಟ ನಡೆಗೆ ನಾಡಿನ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.