ನುಡಿ ತಪ್ಪಿದ ಸರ್ಕಾರ; ಕನ್ನಡಿಗರ ಮೀಸಲಾತಿಯಿಂದ ಯು ಟರ್ನ್ ಮಾಡಿದ್ರಾ ಸಿದ್ದರಾಮಯ್ಯ?!
ಬೆಂಗಳೂರು: ರಾಜ್ಯದ ಎಲ್ಲಾ ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿಯನ್ನು ನೀಡುವುದಾಗಿ, ರಾಜ್ಯ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿತ್ತು. ಆದರೆ ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಧೇಯಕದ ಒಪ್ಪಿಗೆಯಿಂದ ಹಿಂದೆ ಸರಿದಿದ್ದಾರೆ. ಮೀಸಲಾತಿ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
“ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು.” ಎಂದು ಹೇಳಿದ್ದಾರೆ.
ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿಯನ್ನು ರಾಜ್ಯದ ಖಾಸಗಿ ಕೈಗಾರಿಕೆಗಳು ವಿರೋಧಿಸಿದ್ದರು. ಟ್ರೇಡ್ ಅಸೋಸಿಯೇಶನ್ ಆದಂತಹ ನಾಸ್ಕೋಮ್ ಮೀಸಲಾತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿತ್ತು. ಹಾಗೆಯೇ ಸರ್ಕಾರಕ್ಕೆ ಈ ವಿಧೇಯಕವನ್ನು ಹಿಂಪಡೆಯುವಂತೆ ಕೇಳಿಕೊಳ್ಳಲಾಗುವುದು ಎಂದು ಕೂಡ ತಿಳಿಸಿತ್ತು.